ರಸ್ತೆ ಸುರಕ್ಷತಾ ಕ್ರಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್
ಚಾಮರಾಜನಗರ, ಆ. 07 - ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಗ್ಗಿಸುವ ಸಲುವಾಗಿ ರಸ್ತೆ ಸುರಕ್ಷತಾ ಕ್ರಮಗಳ ಪಾಲನೆ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಸಾಕಷ್ಟು ದಾಖಲಾಗುತ್ತಿವೆ. ಅಪಘಾತಗಳಿಗೆ ನಾನಾ ಕಾರಣಗಳು ಇರಬಹುದು. ಆದರೆ ನಿರ್ಧಿಷ್ಟವಾಗಿ ಅಪಘಾತ ಸಂಭವಿಸಲು ಇರುವ ಕಾರಣಗಳ ಬಗ್ಗೆ ಹುಡುಕಬೇಕಿದೆ. ರಸ್ತೆ ಸುರಕ್ಷತಾ ನಿಯಮಗಳು ಪಾಲನೆಯಾಗದೇ ಇರುವುದರಿಂದ ಅಪಘಾತಗಳು ನಡೆಯುತ್ತಿವೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಬೇಕಿದೆ ಎಂದರು.
ರಸ್ತೆ ಅಪಘಾತ ಪ್ರಕರಣಗಳನ್ನು ವರ್ಗೀಕರಿಸಿ ಸಲ್ಲಿಸಲಾಗುವ ಮಾಹಿತಿ ವರದಿ ತಯಾರಿಕೆಯಲ್ಲಿಯೂ ಪ್ರಸ್ತುತ ಸಂದರ್ಭಗಳಿಗೆ ಅನುಗುಣವಾಗಿ ಬದಲಾವಣೆ ಮಾಡಿಕೊಳ್ಳಬೇಕಿದೆ. ಈ ಹಿಂದಿನ ನಮೂನೆಯಲ್ಲಿ ಕೆಲವು ಮಾರ್ಪಾಡುಗಳ ಅಗತ್ಯವಿದೆ. ಇದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟು ಪ್ರಮಾಣದಲ್ಲಿ ಅಪಘಾತ ಪ್ರಕರಣಗಳು ನಡೆದಿವೆ ಎಂಬ ಬಗ್ಗೆ ನಿಖರ ಮಾಹಿತಿ ತಿಳಿಯಬಹುದಾಗಿದೆ. ಹೀಗಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ವರದಿ ನೀಡುವ ನಮೂನೆಗಳನ್ನು ಅಗತ್ಯಕ್ಕೆ ಅನುಗುಣವಾಗಿ ಮಾರ್ಪಾಡು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡುವ ವಿಷಯದಲ್ಲಿ ನಾಗರಿಕರಿಗೆ ಪರಿಪೂರ್ಣವಾದ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಏರ್ಪಾಡು ಮಾಡಬೇಕು. ಜನರಿಗೆ ರಸ್ತೆ ಸುರಕ್ಷತಾ ನಿಯಮಗಳು ಮನದಟ್ಟು ಮಾಡಿಕೊಡುವ ಕೆಲಸಕ್ಕೆ ಪ್ರಾದೇಶಿಕ ಸಾರಿಗೆ ಇಲಾಖೆ ಮುಂದಾಗಬೇಕು. ಶಾಲಾಕಾಲೇಜು ವ್ಯಾಪ್ತಿಯಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಸುರಕ್ಷತೆ ನಿಯಮಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಂತೆ ತಿಳಿವಳಿಕೆ ನೀಡಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.
ರಸ್ತೆ ಸುರಕ್ಷತಾ ಪ್ರಾಧಿಕಾರ ಸಮಿತಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕಿದ್ದರೆ ಪ್ರತಿ ತಿಂಗಳು ಸಭೆ ನಡೆಯಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿವೆ. ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ನಿರ್ವಹಣೆಯ ರಸ್ತೆಗಳು ಇವೆ. ಈ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯರಲ್ಲಿ ರಸ್ತೆಗೆ ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಸದಸ್ಯರಾಗಬೇಕಿದೆ. ಮುಂದಿನ ಸಭೆಯ ವೇಳೆಗೆ ಸಮಿತಿಯಲ್ಲಿ ಕೈಬಿಟ್ಟುಹೋಗಿರುವ ಅಧಿಕಾರಿಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಇನ್ನು ಮುಂದೆ ಜಿಲ್ಲಾ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕೆಲಸದೊಂದಿಗೆ ರಸ್ತೆಗೆ ಸಂಬಂಧಿಸಿದ ಇಲಾಖೆಗಳು ಸಹ ಒಟ್ಟಾಗಿ ಸೇರಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಪಘಾತ ಪ್ರಕರಣಗಳು ಇಳಿಮುಖವಾಗಲು ಅಳವಡಿಸಬೇಕಿರುವ ಸಂಚಾರಿ ಸುರಕ್ಷತಾ ಫಲಕಗಳು, ಇತರೆ ಮಾಹಿತಿ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚು ಗಮನ ನೀಡಬೇಕೆಂದು ಜಿಲ್ಲಾಧಿಕಾರಿ ಹರೀಶ್ ಕುಮಾರ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾತನಾಡಿ ಅಪಘಾತ ನಡೆದ ಸ್ಥಳಕ್ಕೆ ಪೊಲೀಸರಷ್ಟೇ ಭೇಟಿ ಕೊಡುವ ಪರಿಪಾಠವಿದೆ. ಆದರೆ ಯಾವ ಕಾರಣದಿಂದ ರಸ್ತೆ ಅಪಘಾತ ಸಂಭವಿಸಿದೆ? ವಾಹನ ಸವಾರರಿಗೆ ರಸ್ತೆ ಸುರಕ್ಷತೆ ನಿಯಮ ಸೂಚನೆಗಳು ನೀಡದೇ ಇದ್ದರಿಂದ ಅಪಘಾತ ನಡೆದಿದೆಯೇ ಇಲ್ಲವೇ? ರಸ್ತೆ ಕಾಮಗಾರಿ ಸರಿಯಿಲ್ಲದೇ ಪ್ರಕರಣ ಸಂಭವಿಸಿದೆಯೇ ಎಂಬ ಬಗ್ಗೆ ಎಂಜಿನಿಯರ್‍ಗಳು ಸ್ಥಳಕ್ಕೆ ಭೇಟಿ ನೀಡಬೇಕು. ಇದರಿಂದ ನಿರ್ಧಿಷ್ಟ ಕಾರಣಗಳು ತಿಳಿದುಬಂದು ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದಾಗಿದೆ ಎಂದರು.
ರಸ್ತೆ ನಿರ್ವಹಣೆ ಹಾಗೂ ನಿರ್ಮಾಣ ಮಾಡುವ ಇಲಾಖೆಗಳು ಕ್ರಿಯಾ ಯೋಜನೆಯಲ್ಲಿ ರಸ್ತೆ ಸುರಕ್ಷತಾ ಪಾಲನೆಗೆ ಬೇಕಿರುವ ಅನುದಾನವನ್ನು ಸಹ ನಿಗದಿಮಾಡಿಕೊಳ್ಳಬೇಕು. ಇದರಿಂದ ರಾಜ್ಯ, ರಾಷ್ಟ್ರೀಯ ಹಾಗೂ ಇತರೆ ರಸ್ತೆಗಳಲ್ಲಿ ರಸ್ತೆ ಸುರಕ್ಷತೆಗೆ ಬೇಕಿರುವ ಕೆಲಸಗಳಿಗೆ ಅನುದಾನ ಬಳಸಿಕೊಂಡು ಪರಿಣಾಮಕಾರಿಯಾಗಿ ವಾಹನ ಸವಾರರಿಗೆ ಸಂಚಾರಕ್ಕೆ ಸುಗಮ ನಿರ್ವಹಣೆಗೆ ಅಗತ್ಯ ಕ್ರಮ ವಹಿಸಬಹುದಾಗಿದೆ. ಈ ನಿಟ್ಟಿನಲ್ಲಿ ಇನ್ನುಮುಂದೆ ಇಲಾಖೆಗಳು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ರಸ್ತೆ ಸುರಕ್ಷತೆ ನಿರ್ವಹಣೆಗೆ ಆದಷ್ಟು ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಧಮೇಂದ್ರ ಕುಮಾರ್ ಮೀನಾ ತಿಳಿಸಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ. ಪ್ರಭುಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಆರ್‍ಸಿಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಶಿಕ್ಷಣ ಇಲಾಖೆ ಅಧಿಕಾರಿ ಸೋಮಶೇಖರ್, ಲೋಕೋಪಯೋಗಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಆ.10ರಂದು ಮಾಜಿ ರಾಜ್ಯಪಾಲರಾದ ಬಿ.ರಾಚಯ್ಯ ಅವರ ಸ್ಮಾರಕ ನಿರ್ಮಾಣ, ಜೋಡಿರಸ್ತೆ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಿಎಂ ಶಿಲಾನ್ಯಾಸ
ಚಾಮರಾಜನಗರ, ಆ. 07 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದ ಚಿರಶಾಂತಿ ಧಾಮದಲ್ಲಿ ಮಾಜಿ ರಾಜ್ಯಪಾಲರಾದ ದಿವಂಗತ ಬಿ. ರಾಚಯ್ಯನವರ 95ನೇ ಜನ್ಮ ವರ್ಷಾಚರಣೆ ಸ್ಮರಣಾರ್ಥ ಸ್ಮಾರಕ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ನಗರದ ಬಿ. ರಾಚಯ್ಯ ಜೋಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಹಾಗೂ ಸಾರ್ವಜನಿಕ ಸಮಾರಂಭವು ಪಟ್ಟಣದಲ್ಲಿರುವ ತಹಸೀಲ್ದಾರ್ ಕಚೇರಿಯ ಹತ್ತಿರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸುವರು. ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಜ್ಯೋತಿ ಬೆಳಗಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಬಿ.ರಾಚಯ್ಯ ಜೋಡಿ ರಸ್ತೆ ಅಭಿವೃದ್ಧಿ ಕಾಮಗಾರಿ ನೀಲಿ ನಕ್ಷೆ ಅನಾವರಣ ಮಾಡುವರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ ಅವರು ದಿವಂಗತ ಬಿ. ರಾಚಯ್ಯ ಅವರ ಸ್ಮಾರಕದ ನೀಲಿ ನಕ್ಷೆ ಅನಾವರಣ ಮಾಡುವರು.
ಕಾರ್ಯಕ್ರಮದಲ್ಲಿ ದಿವಂಗತ ಬಿ. ರಾಚಯ್ಯ ಅವರ ಧರ್ಮಪತ್ನಿ ಶ್ರೀಮತಿ ಗೌರಮ್ಮ ಬಿ. ರಾಚಯ್ಯ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಗುತ್ತದೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಸಂಸದರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ವಿಧಾನ ಪರಿಷತ್ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಹÉಚ್. ಎಸ್. ನಂಜಪ್ಪ ಆಗಮಿಸುವರು.
ನಗರಸಭೆ ಅಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಆಲೂರು ತಾಲೂಕು ಪಂಚಾಯತ್ ಸದಸ್ಯರಾದ ಶೈಲಜ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಮಂಗಲಿ, ಉಪಾಧ್ಯಕ್ಷರಾದ ಪರಿಮಳ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 07 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಸ್ತೆ ಅಪಘಾತದ ಸಂಕಷ್ಟ ಪರಿಸ್ಥಿತಿಯಲ್ಲಿ ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಕೊಡಿಸಲು ನೆರವಾದವರಿಗೆ ನೀಡಲಾಗುವ ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.ಅಪಘಾತ ಸಂದರ್ಭ ವ್ಯಕ್ತಿಗಳು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲು ನೆರವಾಗಲೆಂದು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಶಸ್ತಿ ನೀಡಲಾಗುತ್ತದೆ. ಅಪಘಾತದ ಗಾಯಾಳುಗಳಿಗೆ ಸಹಾಯ ಮಾಡಲು ಶ್ರಮಿಸಿರುವ ಯಾವುದೇ ವಯಸ್ಸಿನ ವ್ಯಕ್ತಿ ಪ್ರಶಸ್ತಿಗಾಗಿ ಸ್ವಯಂ ಅಥವಾ ಸಾಕ್ಷಿಯಾದ ವ್ಯಕ್ತಿಯಿಂದ ನಾಮಕರಣಗೊಳ್ಳಬಹುದಾಗಿದೆ. ಪ್ರಶಸ್ತಿಗೆ ಆಯ್ಕೆಯಾದವರನ್ನು ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 10 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನÀಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕರು ಅಥವಾ ಆಯಾ ತಾಲೂಕು ಆರೋಗ್ಯ ಮಿತ್ರರನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 7259003402 ಅಥವಾ 7259003426 (ಪುಟ್ಟೇಗೌಡ) ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಎಚ್. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ
ಚಾಮರಾಜನಗರ, ಆ. 07 - ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿ ಪರ್ಪಸ್ ಹಾಲ್‍ನ ಒಂದನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ವಿವರಗಳಿಗೆ ಇಲಾಖಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224370 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment