ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಪೂರ್ವಸಿದ್ಧತೆ ಕೈಗೊಳ್ಳಿ : ಜಿಪಂ ಸಿಇಓ ಡಾ. ಹರೀಶ್ ಕುಮಾರ್ ಸೂಚನೆ
ಚಾಮರಾಜನಗರ, ಜೂ. 04 – ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಜಿಲ್ಲೆಯು ಉತ್ತಮ ಸಾಧನೆ ಮಾಡಲು ಈಗಿನಿಂದಲೇ ಶಿಕ್ಷಕರು ಹಾಗೂ ಅಧಿಕಾರಿಗಳು ಪರಿಶ್ರಮದಿಂದ ಪೂರ್ವಸಿದ್ಧತಾ ಕ್ರಮಗಳನ್ನು ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ, ಅಕ್ಷರ ದಾಸೋಹ, ಶಿಕ್ಷಣ ಇಲಾಖೆಯ ಇತರೆ ಯೋಜನೆ ಸಮರ್ಪಕ ಅನುಷ್ಠಾನ ಸಂಬಂಧ ನಡೆದ ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಜಿಲ್ಲೆಯು ತೀವ್ರ ಹಿನ್ನೆಡೆ ಸಾಧಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಫಲಿತಾಂಶ ಸಾಧನೆಯಲ್ಲಿ ಹಿಂದೆ ಬಿದ್ದಿರುವುದಕ್ಕೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು. ಯಾವ ಹಂತದಲ್ಲಿ ಫಲಿತಾಂಶ ಕುಸಿಯಲು ಕಾರಣವಾಯಿತು ಎಂಬ ಬಗ್ಗೆ ಅಧಿಕಾರಿಗಳು ಹಾಗೂ ಶಿಕ್ಷಕರಿಂದಲೇ ಕಾರಣ ಹಾಗೂ ಅನಿಸಿಕೆಗಳನ್ನು ಆಲಿಸಿದರು.
ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದದ ನಡುವೆ ಪ್ರೀತಿ ಸಂವಹನ ಇರಬೇಕು. ಶಿಕ್ಷಕರು ನೈತಿಕತೆ ಪ್ರಾಮಾಣಿಕತೆ, ಶಿಸ್ತು ಬೆಳೆಸಿಕೊಳ್ಳಬೇಕು. 8ನೇ ತರಗತಿಯಿಂದಲೇ ಬೋಧನಾ ಮಟ್ಟವನ್ನು ಉತ್ತಮಪಡಿಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದರೆ ಎಸ್‍ಎಸ್‍ಎಲ್‍ಸಿ ಹಂತದಲ್ಲಿ ಏಕಾಏಕಿ ಉಂಟಾಗುವ ಒತ್ತಡವನನು ಕಡಿಮೆ ಮಾಡಬಹುದು. ಇದರಿಂದ ವಿದ್ಯಾರ್ಥಿಗಳು ಸಹಜವಾಗಿ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕಗಳಿಸಲು ಸಾಧ್ಯವಾಗುತ್ತದೆ. ಫಲಿತಾಂಶವೂ ಸುಧಾರಣೆಯಾಗಲಿದೆ ಎಂದು ಹರೀಶ್ ಕುಮಾರ್ ಅವರು ತಿಳಿಸಿದರು.
ಶೈಕ್ಷಣಿಕ ಸಾಲಿನ ಆರಂಭದಲ್ಲೇ ಕಳೆದ ಬಾರಿಯ ತಪ್ಪುಗಳು ಪುನರಾವರ್ತನೆಯಾಗದಂತೆ ತಿದ್ದಿಕೊಳ್ಳಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಗುರುತಿಸಿ ಅವರಿಗೆ ಮನದಟ್ಟಾಗುವಂತೆ ಬೋಧನಾ ಕಾರ್ಯವನ್ನು ನಿರ್ವಹಿಸಬೇಕು. ವಿಶೇಷ ಗಮನ ನೀಡಬೇಕು. ಈ ಬಾರಿ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಕಳಪೆ ಸಾಧನೆಯಾದರೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ವಿಷಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆ, ಹಾಜರಾತಿಯನ್ನು ಗಣನೆಗೆ ತೆಗೆದುಕೊಂಡು ಆ ಪ್ರಕಾರವೇ ಬಿಸಿಯೂಟ ಧಾನ್ಯ ಇನ್ನಿತರ ಅಗತ್ಯ ಪರಿಕರಗಳ ಬೇಡಿಕೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿಯಾಗಿ ಧಾನ್ಯ ಪಡಿತರ ಪದಾರ್ಥಗಳನ್ನು ಪಡೆದು ಬಳಕೆ ಮಾಡದೇ ವ್ಯರ್ಥ ಮಾಡಬಾರದು ಎಂದು ಹರೀಶ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಿಸಿಯೂಟ ವಹಿಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಧಾನ್ಯಗಳು, ಹಾಲಿನ ಪುಡಿ, ಸೇರಿದಂತೆ ಅಗತ್ಯ ಪದಾರ್ಥಗಳನ್ನು ನಮೂದು ಮಾಡಬೇಕು. ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಳ್ಳುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಪಂಚಾಯತ್ ಸಿಇಓ ಅವರು ತಾಕೀತು ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಅವರು ಮಾತನಾಡಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಗಣಿತ ವಿಜ್ಞಾನದಂತಹ ಕ್ಷಿಷ್ಟಕರ ವಿಷಯಗಳು ಅರ್ಥವಾಗಿವೆಯೇ ಎಂಬ ಬಗ್ಗೆ ಶಿಕ್ಷಕರು ತಿಳಿದುಕೊಳ್ಳಬೇಕು. ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಪಠ್ಯಕ್ರಮ ಪೂರ್ಣಗೊಳಿಸುವ ಒತ್ತಡವನ್ನು ಮಕ್ಕಳ ಮೇಲೆ ಹೇರದೆ ಆರಂಭದಿಂದಲೇ ಮನದಟ್ಟಾಗುವ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಈ ಬಾರಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಹೆಚ್ಚು ಪರಿಶ್ರಮಪಟ್ಟು ಮಕÀ್ಕಳನ್ನು ಸಜ್ಜುಗೊಳಿಸಬೇಕು ಎಂದರು.
ಅಕ್ಷರ ದಾಸೋಹ ಅಧಿಕಾರಿ ಉದಯಕುಮಾರ್, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಇತರರು ಸಭೆಯಲ್ಲಿ ಹಾಜರಿದ್ದರು.
ಮಳೆ ಹಿನ್ನಲೆ : ಪರಿಹಾರ ಕ್ರಮಗಳಿಗೆ ಸನ್ನದ್ಧರಾಗಿರಲು ಜಿ.ಪಂ. ಸಿ.ಇ.ಒ ಸುತ್ತೋಲೆ
ಚಾಮರಾಜನಗರ, ಜೂ. 04 - ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಎದುರಾಗುವ ಯಾವುದೇ ಸಮಸ್ಯೆ ನಿವಾರಿಸಿ ಪರಿಹಾರ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಾಗಿರಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿ ಸಂಭವಿಸಿದ್ದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಹಾರ ಕ್ರಮಕೈಗೊಳ್ಳಬೇಕಾಗುತ್ತದೆ. ಸಕಾಲದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಪ್ರಸ್ತುತ ಸಂದರ್ಭದಲ್ಲಿ ಮುಖ್ಯ ಕರ್ತವ್ಯ ಹಾಗೂ ಜವಾಬಾýರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ಸಮರೋಪಾದಿಯಲ್ಲಿ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಹಾಗೂ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಜರೂರಾಗಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಬೇಕಾಗುತ್ತದೆ. ಈ ದಿಸೆಯಲ್ಲಿ ಕೇಂದ್ರ ಸ್ಥಾನದಲ್ಲಿ ಇದ್ದು ಸಮಸ್ಯೆ, ದೂರುಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕು.
ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ರಜೆ, ಅನ್ಯ ಕಾರ್ಯಗಳ ಮೇಲೆ ತೆರಳುವಂತಿಲ್ಲ. ಕೇಂದ್ರಸ್ಥಾನವನ್ನು ಬಿಡಲು ಅನುಮತಿ ಪಡೆಯದೆ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಧಿಕಾರಿಗಳು ಅನುಮತಿ ಪಡೆದ ನಂತರವೇ ರಜೆಯ ಮೇಲೆ ತೆರಳಬೇಕು. ತಪ್ಪಿದಲ್ಲಿ ಗೈರುಹಾಜರಿಯನ್ನು ವೇತನರಹಿತ ರಜೆ ಎಂದು ಪರಿಗಣಿಸುವುದಲ್ಲದೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹರೀಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಿರಿಯ ಇಂಜಿನಿಯರ್‍ಗಳಿಗೆ ಅನಿವಾರ್ಯವಿದ್ದಲ್ಲಿ ವೈದ್ಯಕೀಯ ರಜೆಯನ್ನು ಹೊರತುಪಡಿಸಿ ಬೇರೆ ಯಾವುದೇ ರಜೆಯನ್ನು ಯಾವುದೇ ಕಾರಣಕ್ಕೂ ಸಂಬಂಧಪಟ್ಟ ಕಾರ್ಯನಿರ್ವಾಹಕ ಅಧಿಕಾರಿಗಳು ನೀಡÀಬಾರದು.
ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಅತಿವೃಷ್ಟಿ, ನೈರ್ಮಲ್ಯ ಹಾಗೂ ಇತ್ಯಾದಿ ಸಮಸ್ಯೆಗಳಿದ್ದರೆ ಆಯಾ ಹಂತದಲ್ಲಿಯೇ ಪರಿಹಾರಕ್ಕೆ ಮುಂದಾಗಬೇಕಿದೆ. ಅವಶ್ಯವಿದ್ದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿನೀಡಿ ಪರಿಹಾರ ಕ್ರಮಕೈಗೊಳ್ಳಬೇಕು. ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹರಿಸಬೇಕು.
ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಎಲ್ಲಾ ಗ್ರಾಮಗಳಿಗೆ ಭೇಟಿನೀಡಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲಾ, ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸಬೇಕು. ಔಷಧಗಳು ದಾಸ್ತಾನು ಇರುವಂತೆ ಕ್ರಮವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ
ಚಾಮರಾಜನಗರ, ಜೂ. 04 ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.ರಾಮಸಮುದ್ರದ ಸಿಆರ್ ಬಾಲಪಟ್ಟಣ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿರುವುದು ಇಲಾಖೆ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಹಲ್ಲೆ ಮಾಡಿದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ, ಇಂಥಹ ಪ್ರಕರಣಗಳು ಪುನರಾವರ್ತನೆಯಾಗಬಾರದು. ವಿದ್ಯಾರ್ಥಿಗಳ ಮೇಲೆ ದೈಹಿಕ ಅಥವಾ ಮಾನಸಿಕ ಹಿಂಸೆ, ಹಲ್ಲೆ ಮಾಡುವುದು ಮಕ್ಕಳ ರಕ್ಷಣಾ ಹಕ್ಕು ನಿಯಮ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಮಹದೇವಪ್ಪ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಯಾವುದೇ ವಿದ್ಯಾರ್ಥಿಯ ಮೇಲೆ ದೈಹಿಕ ಹಲ್ಲೆ ನಡೆಸಬಾರದು. ಹೆಚ್ಚು ಹೋಂವರ್ಕ್ ನೀಡಬಾರದು. ಪುಸ್ತಕ ಹೊರೆಯಾಗದಂತೆ ಅಗತ್ಯ ಕ್ರಮಗಳನ್ನು ಶಿಕ್ಷಕರು ವಹಿಸಬೇಕು. ಈ ಎಲ್ಲ ವಿಷಯಗಳ ಸಂಬಂಧ ತುರ್ತಾಗಿ ವರದಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಅವರು ಜಿಲ್ಲೆಯ ಐದೂ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಜೂ. 5ರಂದು ನಗರದಲ್ಲಿ ವಿಶ್ವಪರಿಸರ ದಿನಾಚರಣೆ
ಚಾಮರಾಜನಗರ, ಜೂ. 04 :- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಸಾರ್ವಜನಿಕ ಶಿಕ್ಷಣ ಹಾಗೂ ತೋಟಗಾರಿಕಾ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5ರಂದು ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗಣ್ಯರಿಂದ ಸಸಿ ನೆಡುವ ಕಾರ್ಯಕ್ರಮ ಹಾಗೂ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‍ಲಾಲ್ ಮೀನಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಹರೀಶ್ ಕುಮಾರ್ ಪ್ರಶಸ್ತಿ ವಿತರಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಪುಸ್ತಕ ಬಿಡುಗಡೆ ಮಾಡುವರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಡಾ. ಪಿ. ಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೆ. ಮಹದೇವಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಬಿ.ಎಲ್. ಶಿವಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರು ಹಾಗೂ ಮುಖ್ಯೋಪಾಧ್ಯಾಯರಾದ ಬಿ. ಸುಜಯ್ ಕುಮಾರ್ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದÉ.
ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡಿದರೆ ಕ್ರಮ
ಚಾಮರಾಜನಗರ, ಜೂ. 04 ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂಗಡಿ, ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.
ಪ್ಲಾಸ್ಟಿಕ್‍ನಿಂದ ತಯಾರಿಸಿದ ಕ್ಯಾರಿಬ್ಯಾಗ್, ಬಾವುಟ, ಭಿತ್ತಿಪತ್ರ, ತೋರಣ, ಪ್ಲೆಕ್ಸ್, ತಟ್ಟೆ, ಲೋಟ, ಚಮಚ, ಕ್ಲಿಂಗ್ಸ್ ಫಿಲ್ಕ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು, ಥರ್ಮಕೋಲ್ ವಸ್ತುಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಹಾಗೂ ವಿತರಣೆ ಮಾಡುವಂತಿಲ್ಲ. ಒಂದುವೇಳೆ ಇದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದೆಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದಾರೆ.
No comments:
Post a Comment