ಮಕ್ಕಳ ರಕ್ಷಣೆ, ಆರೋಗ್ಯ, ಶಿಕ್ಷಣ ಪ್ರಗತಿಗೆ ವಿಶೇಷ ಕಾಳಜಿ ವಹಿಸಿ : ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರ ಸೂಚನೆ
ಚಾಮರಾಜನಗರ, ನವೆಂಬರ್ 24 (ಕರ್ನಾಟಕ ವಾರ್ತೆ):- ಮಕ್ಕಳ ರಕ್ಷಣೆ, ಆರೋಗ್ಯ, ಶಿಕ್ಷಣ, ಸುರಕ್ಷತೆ ಸೇರಿದಂತೆ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿರುವ ಎಲ್ಲಾ ಕ್ರಮಗಳಿಗೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತÀ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ಮಕ್ಕಳ ರಕ್ಷಣೆ, ಪೋಷಣೆ, ಆರೋಗ್ಯ, ಶೈಕ್ಷಣಿಕ, ಪೋಕ್ಸೋ ಕಾಯ್ದೆ, ಬಾಲನ್ಯಾಯ ತಿದ್ದುಪಡಿ ಕಾಯ್ದೆ ಅನುಷ್ಠಾನ ಸೇರಿದಂತೆ ಮಕ್ಕಳ ವಿಷಯಗಳ ಸಂಬಂಧ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಹಭಾಗಿದಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಯಾಗಬೇಕು. ಮಕ್ಕಳ ಬೆಳವಣಿಗೆ, ವಿಕಾಸ, ಭಾವನೆಗಳ ಹಂಚಿಕೊಳ್ಳುವ ಹಕ್ಕುಗಳನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಮೇಲೆ ಶೋಷಣೆ, ದೌರ್ಜನ್ಯ ನಡೆಯದಂತೆ ಅವರ ಸುರಕ್ಷತೆಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕೆಂದು ಅಧ್ಯಕ್ಷರು ತಿಳಿಸಿದರು.
ಅಂಗನವಾಡಿ, ಶಾಲೆ, ಕಾಲೇಜು, ವಿದ್ಯಾರ್ಥಿನಿಲಯಗಳು ಎಲ್ಲೇ ಇರಲಿ ಮಕ್ಕಳ ರಕ್ಷಣೆ ಮುಖ್ಯವಾಗಿದೆ. ಅಧಿಕಾರಿಗಳು ವ್ಯಾಪಕವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ, ಆಹಾರ, ಸುರಕ್ಷತೆ ಮತ್ತಿತ್ತರ ಅಂಶಗಳ ಬಗ್ಗೆ ಪರಿಶೀಲಿಸಬೇಕು. ಶಾಲೆಗಳಲ್ಲಿ ಶಿಕ್ಷಕರು ಆಪ್ತ ಸಮಾಲೋಚನೆ ಮೂಲಕ ಮಕ್ಕಳ ಮನಸ್ಸನ್ನು ತಿಳಿಯುವ ಕೆಲಸ ಮಾಡಬೇಕು. ಎಲ್ಲಿಯೂ ದೌರ್ಜನ್ಯಗಳು ಆಗದಂತೆ ಮುಂಜಾಗ್ರತೆ ವಹಿಸಬೇಕು ಎಂದರು.
ಹಾಸ್ಟೆಲ್‍ಗಳಲ್ಲಿಯೂ ಸಹ ಮಕ್ಕಳ ಬೆಳವಣಿಗೆ ಮೇಲೆ ನಿಗಾ ಇರಬೇಕು. ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್‍ಗಳಲ್ಲಿ ಮಹಿಳಾ ವಾರ್ಡನ್‍ಗಳು ಇರಬೇಕು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜನೆ ಮಾಡಬೇಕು. ಕಾರ್ಯಕ್ರಮಗಳು ವಾಸ್ತವವಾಗಿ ವಿದ್ಯಾರ್ಥಿಗಳಲ್ಲಿ ಬದಲಾವಣೆ ತರುವಂತಾದರೆ ಮಾತ್ರ ಉದ್ದೇಶ ಸಫಲವಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದರು.
ಮಕ್ಕಳ ಗ್ರಾಮಸಭೆಗಳನ್ನು ಆಯೋಜನೆ ಮಾಡಿ ಮಕ್ಕಳು ಹೇಳಿಕೊಳ್ಳುವ ಸಮಸ್ಯೆಗಳು ವಿಷಯಗಳನ್ನು ದಾಖಲಿಸಿ ನಡಾವಳಿ ಮಾಡಬೇಕು. ಬಳಿಕ ಇದರ ಅನುಷ್ಠಾನ ಮಾಡುವುದರಿಂದ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ಮಕ್ಕಳಿಗೆ ಶಾಲೆಗಳಲ್ಲಿ ಪೌಷ್ಠಿಕ ಆಹಾರದ ಮಹತ್ವ, ಗಿಡಮೂಲಿಕೆಗಳ ಪರಿಚಯ ಮಾಡಿಕೊಡಬೇಕು. ಪಠ್ಯ ಬೋಧನೆ ಜೊತೆಗೆ ಕ್ರೀಡೆ ಇತರೆ ಉತ್ತಮ ಹವ್ಯಾಸಗಳಿಗೆ ಉತ್ತೇಜಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣಗೌಡ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಅವರು ಮಾತನಾಡಿ ಶಾಲೆಗಳಲ್ಲಿ ಕೊಠಡಿಗಳು, ಶೌಚಾಲಯಗಳ ಅಗತ್ಯತೆ ಬಗ್ಗೆ ಅಧಿಕಾರಿಗಳು ವರದಿ ಮಾಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಆಯಾ ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಹೊಣೆಗಾರರಾಗುತ್ತಾರೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಎಲ್ಲಾ ಕ್ರಮಗಳಿಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದರು.
ಇದೇ ವೇಳೆ ದತ್ತು ಕಾರ್ಯಕ್ರಮ ಹಾಗೂ ಪೋಕ್ಸೊ ಕಾಯ್ದೆಯ ಜಾಗೃತಿ ಕುರಿತ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಗೀತಾಲಕ್ಷ್ಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸರಸ್ವತಿ, ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಬಾಲನ್ಯಾಯ ಮಂಡಳಿಯ ಸದಸ್ಯರಾದ ಟಿ.ಜೆ. ಸುರೇಶ್, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಮಕ್ಕಳ ಕ್ಷೇತ್ರದ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment