----
ಜಿಲ್ಲಾ ಉಸ್ತುವಾರಿ ಸಚಿವರಿಂದ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ವೀಕ್ಷಣೆ
ರಾಜನಗರ. ಡಿ.4 - ಹನೂರು ವಿಧಾನಸಭಾ ಕ್ಷೇತ್ರದ 98 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ 192 ಕೋಟಿ ರೂ. ವೆಚ್ಚದ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ವಸತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ವೀಕ್ಷಣೆ ಮಾಡಿದರು.
ಇದೇ ಡಿಸೆಂಬರ್ 12ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಶಾಸಕರಾದ ಆರ್. ನರೇಂದ್ರ ಅವರೊಂದಿಗೆ ಭೇಟಿ ನೀಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಶೀಲಿಸಿದರು.
ಪಳ್ಯ ಗ್ರಾಮದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಸಚಿವರು ಶುದ್ಧ ನೀರಿನ ಸಂಗ್ರಹ ಘಟಕ, ಶುದ್ಧೀಕರಣ ಕಾರ್ಯಗಾರ, ಪಂಪ್‍ಹೌಸ್ ಸೇರಿದಂತೆ ಇತರೆ ವಿಭಾಗಗಳನ್ನು ವೀಕ್ಷಿಸಿದರು. ಮಳೆಗಾಲದಲ್ಲಿಯೂ ಸಹಾ ಶುದ್ಧ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದ ಉಸ್ತುವಾರಿ ಸಚಿವರು ಪೂರ್ಣ ಕಾಮಗಾರಿಗೆ ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಮುಗಿಸುವಂತೆ ನಿರ್ದೇಶನ ನೀಡಿದರು. ಘಟಕದ ಆವರಣವನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಗಿಡಗಳನ್ನು ಬೆಳಸಿ ಉತ್ತಮ ಪರಿಸರ ಇರುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು. ಇದೇ ವೇಳೆ ಶುದ್ಧೀಕರಣ ಘಟಕದ ಆವರಣದಲ್ಲಿ ಸಚಿವರಾದ ವಿ. ಸೋಮಣ್ಣ ಹಾಗೂ ಶಾಸಕರಾದ ಆರ್. ನರೇಂದ್ರ ಗಿಡನೆಟ್ಟು ನೀರೆದರು. ಬಳಿಕ ಸರಗೂರಿಗೆ ತೆರಳಿ ಕಾವೇರಿ ನದಿ ದಂಡೆಯ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದ ಜಾಕ್ವೆಲ್ ಮತ್ತು ಪಂಪ್ ಹೌಸ್ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಕೆಲ ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಜಿಲ್ಲಾಧಿಕಾರಿಗಳಾದ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‍ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಂಗಾಧರಯ್ಯ, ಉಪ ವಿಭಾಗೀಯಾಧಿಕಾರಿ ಗೀತಾ ಹುಡೇದಾ ಇತರೆ ಅಧಿಕಾರಿಗಳು ಇದ್ದರು.
----
ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳ ಭೇಟಿ ಹಿನ್ನಲೆ : ಜಿಲ್ಲಾ ಉಸ್ತುವಾರಿ ಸಚಿವರಿಂದ ಅಧಿಕಾರಿಗಳ ಸಭೆ, ಸಿದ್ದತೆ ಪರಿಶೀಲನೆ.
ಚಾಮರಾಜನಗರ. ಡಿ.4 - ಚಾಮರಾಜನಗರ ಜಿಲ್ಲೆಗೆ ಇದೇ ಡಿಸೆಂಬರ್ 12ರಂದು ಮುಖ್ಯಮಂತ್ರಿಗಳು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿಂದು ವಸತಿ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳ ಸಭೆ ನಡೆಸಿದರು.
ಮುಖ್ಯಮಂತ್ರಿಯವರು ಡಿಸೆಂಬರ್ 12ರಂದು ಚಾಮರಾಜನಗರ, ಹನೂರು ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ, ಮಲೆ ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಾದ ಆರ್. ನರೇಂದ್ರ ಅವರೊಂದಿಗೆ ಮಹದೇಶ್ವರ ಬೆಟ್ಟದ ನಾಗಮಲೈ ಭವನ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕಾರ್ಯಕ್ರಮ ಆಯೋಜನೆ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮವು ಅಚ್ಚುಕಟ್ಟಾಗಿ ನೆರವೇರಬೇಕು. ಮುಖ್ಯ ರಸ್ತೆಗಳು, ಮಾರ್ಗಗಳನ್ನು ಸಿದ್ದಪಡಿಸಬೇಕು, ವಿವಿದೆಡೆ ಗುಂಡಿಬಿದ್ದಿರುವ ರಸ್ತೆಗಳನ್ನು ಸರಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪೂರ್ಣವಾಗಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಯವರು ಭೇಟಿ ನೀಡಲಿದ್ದಾರೆ. ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಹೆಲಿಪ್ಯಾಡ್ ರಸ್ತೆಯನ್ನು ಸರಿಪಡಿಸಬೇಕು.
ಹನೂರು, ಚಾಮರಾಜನಗರ ಪಟ್ಟಣಗಳಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆಯಲ್ಲಿ ಕುಡಿಯುವ ನೀರು, ಶಾಮಿಯಾನ ಇನ್ನಿತರ ವ್ಯವಸ್ಥೆಗಳು ಸಮರ್ಪಕವಾಗಿ ಇರಬೇಕೆಂದು ಸಚಿವರು ತಿಳಿಸಿದರು.
ಮಲೆ ಮಹದೇಶ್ವರ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ 108 ಅಡಿ ಎತ್ತರದ ಮಹದೇಶ್ವರÀ ಪ್ರತಿಮೆ ಕಾರ್ಯ ತ್ವರಿತವಾಗಿ ಆಗಬೇಕು. ಒಳ ಚರಂಡಿ ಕಾಮಗಾರಿಯು ಸಹ ವೇಗಗತಿಯಲ್ಲಿ ಆಗಬೇಕು ಎಂದು ಸಚಿವರು ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಆರ್. ನರೇಂದ್ರ, ಜಿಲ್ಲಾಧಿಕಾರಿಗಳಾದ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‍ರಾಜ್, ಡಿ.ಸಿ.ಎಫ್ ಸಂತೋಷ್‍ಕುಮಾರ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಗೂ ಮೊದಲು ಸಚಿವರು ಹೆಲಿಪ್ಯಾಡ್, ಮುಡಿಕಟ್ಟೆ, ದಾಸೋಹ ಭವನ, ಸಾಲೂರು ಮಠದ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.
ಒಳ ಚರಂಡಿ ನಿರ್ಮಾಣ ಕಾಮಗಾರಿ ಘಟಕಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಕ್ಷೇತ್ರದ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಹದೇಶ್ವರರ ಪ್ರತಿಮೆ ಕಾರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿಮೆ ಕೆಳಭಾಗದಲ್ಲಿ ಧ್ಯಾನ ಕೇಂದ್ರ ಸೇರಿದಂತೆ ಇತರೆ ಕೆಲಸಗಳನ್ನು ಪೂರ್ಣಗೊಳಿಸಬೇಕು. ಜನವರಿ 15 ರೊಳಗೆ ಪ್ರತಿಮೆ ಕೆಲಸ ಸಂಪೂರ್ಣವಾಗಬೇಕೆಂದು ಸಚಿವರು ಸೂಚನೆ ನೀಡಿದರು.
ಮಲೆ ಮಹದೇಶ್ವರ ಬೆಟ್ಟದ ಭೇಟಿಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಹನೂರು ಪಟ್ಟಣಕ್ಕೆ ಆಗಮಿಸಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಆಯೋಜನೆ ಸಂಬಂಧ ಮಲೆ ಮಹದೇಶ್ವರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು. ಹೆಲಿಪ್ಯಾಡ್ ಸ್ಥಳವನ್ನು ಸಹ ವೀಕ್ಷಿಸಿದರು.
-------
ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್
ಚಾಮರಾಜನಗರ, ಡಿಸೆಂಬರ್ 04:- ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಹಾಗೂ ಮತದಾರರು ಮತದಾನದಿಂದ ವಂಚಿತರಾಗದಂತೆ ಮತದಾರರ ಪಟ್ಟಿ ಸಿದ್ದತೆ ಮಾಡಬೇಕಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳು ಶೇ. 100 ರಷ್ಟು ಶುದ್ದ ಮತದಾರರ ಪಟ್ಟಿ ಸಿದ್ದತೆಗೆ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ಮಹತ್ತರವಾದ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ರಾಜಕೀಯ ಪಕ್ಷಗಳು ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಿ, ಪರಿಷ್ಕರಣಾ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಗಟ್ಟೆಗಳ ಪುನರ್ ವಿಂಗಡಣೆ ಮಾಡಿ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 8 ಮತಗಟ್ಟೆಗಳನ್ನು ವಿಲೀನಗೊಳಿಸಿ ಶಿಥಿಲ, ದುರಸ್ಥಿಗೊಳಪಟ್ಟಿರುವ 11 ಮತಗಟ್ಟೆಗಳ ಕಟ್ಟಡಗಳನ್ನು ಸ್ಥಳಾಂತರಿಸಲಾಗಿದೆ. ಮೂಲ ಮತಗಟ್ಟೆ ತಲುಪಿ ಮತ ಚಲಾಯಿಸಲು 3 ಕಿ.ಮೀ. ಗಿಂತ ಹೆಚ್ಚು ದೂರ ಕ್ರಮಿಸಿ ಮತ ಚಲಾಯಿಸುತ್ತಿರುವ ಗ್ರಾಮಗಳಲ್ಲಿ ಮತ್ತು ಕಾಡಂಚಿನ ಗ್ರಾಮಗಳಲ್ಲಿ ಒಟ್ಟು 10 ಮತಗಟ್ಟೆಗಳನ್ನು ಹೊಸದಾಗಿ ತೆರಯಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 982 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಸಭೆಗೆ ಮಾಹಿತಿ ನೀಡಿದರು.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿಗಳ ಕಚೇರಿ ಮತ್ತು ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಗಳಲ್ಲಿ ಅರ್ಜಿ ಸ್ವೀಕೃತವಾಗಿರುವ ಬಗ್ಗೆ ಮಾಹಿತಿಯನ್ನು ಪ್ರಚುರಪಡಿಸಲಾಗಿದ್ದು, ಈ ಬಗ್ಗೆ ಆಕ್ಷೇಪಣೆ ಏನಾದರೂ ಇದ್ದಲ್ಲಿ ತಿಳಿಸುವಂತೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಕೋರಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಯಾವುದೇ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದಿಲ್ಲ. ಕಾಡಂಚಿನ, ಗುಡ್ಡಗಾಡು ಪ್ರದೇಶ, ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಾಸವಾಗಿರುವ 18 ರಿಂದ 19ರ ವಯೋಮಾನದ ಯುವ ಮತದಾರರು ಮತ್ತು ಈವರೆವಿಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳ್ಳದಿರುವವರ ಮಾಹಿತಿ ನೀಡಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಯವರು ರಾಜಕೀಯ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.
ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆದಿರುವ ಟೋಲ್‍ಫ್ರೀ ನಂಬರ್ 1950ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಈ ಬಗ್ಗೆ ಮತದಾರರ ನೋಂದಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ತಹಶೀಲ್ದಾರ್ ಕಚೇರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಚುನಾವಣಾ ತಹಶೀಲ್ದಾರ್ ಜಯಪ್ರಕಾಶ್, ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಎಂ. ಚಿಕ್ಕಮಹದೇವ, ಎಂ. ಮಹೇಶ್, ಬ್ಯಾಡಮೂಡ್ಲು ಬಸವಣ್ಣ, ಸಯ್ಯದ್ ಅಕ್ರಂ, ಎಲ್ಲಾ ತಾಲೂಕುಗಳ ತಹಶೀಲ್ದಾರರು ಸಭೆಯಲ್ಲಿ ಹಾಜರಿದ್ದರು.
No comments:
Post a Comment