ಪರಿಣಾಮಕಾರಿಯಾಗಿ ಕುಷ್ಠರೋಗ ಅರಿವು ಆಂದೋಲನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ
ಚಾಮರಾಜನಗರ, ಜನವರಿ 23 - ಜಿಲ್ಲೆಯಲಿ ಕುಷ್ಠ ರೋಗ ನಿರ್ಮೂಲನೆಗಾಗಿ ಇದೇ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಷ್ಠರೋಗ ನಿರ್ಮೂಲನೆ ಉದ್ದೇಶಕ್ಕಾಗಿ ಜನವರಿ 30 ರಿಂದ ಕುಷ್ಠರೋಗ ವಿರೋಧಿ ಪಾಕ್ಷಿಕ ದಿನ ಆಚರಿಸಲಾಗುತ್ತಿದೆ. ಈ ಅವಧಿಯಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಂಡು ರೋಗದ ಬಗ್ಗೆ ತಿಳಿವಳಿಕೆ ನೀಡಬೇಕಿದೆ. ಶಾಲೆಗಳಲ್ಲಿ ಉಪಾಧ್ಯಯರಿಗೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಉಂಟು ಮಾಡಬೇಕು. ಇದಕ್ಕಾಗಿ ಮಕ್ಕಳಿಗೆ ರಸಪ್ರಶ್ನೆಯಂತಹ ಕಾರ್ಯಕ್ರಮ ಏರ್ಪಡಿಸಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕುಷ್ಠರೋಗದ ಬಗ್ಗೆ ಇರುವ ತಪ್ಪು ನಂಬಿಕೆ, ಕಳಂಕ, ತಾರತಮ್ಯ ನಿವಾರಣೆ ಹೋಗಲಾಡಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಷ್ಠರೋಗಿಗಳಿಗೆ ಎಂಸಿಆರ್ ಪಾದರಕ್ಷೆ ಹಾಗೂ ಸ್ವಯಂ ಆರೈಕೆ ಕಿಟ್‍ಗಳನ್ನು ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪಿ. ಚಂದ್ರಶೇಖರ್ ಮಾತನಾಡಿ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಡಿಸೆಂಬರ್ ವರೆಗೆ 59 ಹೊಸರೋಗಿಗಳು ಪತ್ತೆಯಾಗಿದ್ದು, ಇವರಿಗೆ ಎಂಡಿಟಿ ಬಹು ಔಷಧಿ ಚಿಕಿತ್ಸೆ ನೀಡಲಾಗುತ್ತಿದೆ. 29 ಮಂದಿ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಕುಷ್ಠರೋಗದ ಸಾಂದ್ರತೆ 0.50ರಷ್ಟಿದೆ. ರೋಗಿಗಳಿಗೆ 132 ಎಂಸಿಆರ್ ಪಾದರಕ್ಷೆ, 50 ಸ್ವಯಂ ಆರೈಕೆ ಕಿಟ್‍ಗಳನ್ನು ವಿತರಿಸಲಾಗಿದೆ. 7 ಅಂಗವಿಕಲ ರೋಗಿಗಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಸರ್ಕಾರಿ ಆದೇಶದನ್ವಯ ಕುಷ್ಠರೋಗದಿಂದ ಗುಣಮುಖರಾದ ಐವರಿಗೆ ಗ್ರೂಪ್ ಡಿ ಹುದ್ದೆ ದೊರಕಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರೋಗದ ಅರಿವು ಸಂಬಂಧ ಹೊರತಂದಿರುವ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಂಕಪ್ಪ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಮನೋರೋಗ ತಜ್ಞರಾದ ಡಾ. ರಾಜೇಶ್, ಮಲೇರಿಯಾ ನಿರ್ಮೂಲನಾಧಿಕಾರಿ ಡಾ. ಕಾಂತರಾಜು, ತಾಲೂಕು ಆರೋಗ್ಯಾ ಅಧಿಕಾರಿಗಳಾದ ಡಾ. ಶ್ರೀನಿವಾಸ್, ಡಾ. ಗೋಪಾಲ್, ಡಾ. ಪ್ರಕಾಶ್, ಡಾ. ಗಿರಿದಾಸ್, ಜಿಲ್ಲಾ ಪಂಚಾಯತ್ ಅಧಿಕಾರಿ ದೀಪಾ, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಜಾಗೃತಿ ಮೂಲಕ ಬಾಲ್ಯವಿವಾಹ ಪ್ರಕರಣ ತಡೆಯಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಲಹೆ
ಚಾಮರಾಜನಗರ, ಜನವರಿ 23- ಬಾಲ್ಯವಿವಾಹದಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯವಿವಾಹ ನಿಷೇಧ ಕುರಿತು ಆಯೋಜಿಸಲಾಗಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಭಾವನಾತ್ಮಕ ವಿಚಾರಗಳ ಬಗ್ಗೆ ಅತ್ಯಂತ ಸೂಕ್ಷ್ಮತೆ ಇರಬೇಕಿದೆ. ಬಾಲ್ಯವಿವಾಹ ನಡೆಯುವ ಹಂತದವರೆಗಿನ ಮುಂಚೆಯೇ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿದರೆ ಬಾಲ್ಯವಿವಾಹವನ್ನು ತಡೆಗಟ್ಟಬಹುದು. ಹೀಗಾಗಿ ಅಧಿಕಾರಿಗಳು ಬಾಲ್ಯವಿವಾಹದಿಂದ ಆಗುವ ಪರಿಣಾಮಗಳ ಕುರಿತು ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಬಾಲ್ಯವಿವಾಹದಂತಹ ಪದ್ದತಿ ಹೋಗಲಾಡಿಸಲು ಜನರನ್ನು ಮನವೊಲಿಸಬೇಕು. ಆರಂಭದಲ್ಲಿ ಪ್ರತಿರೋಧ ಸಹಜವಾಗಿಯೇ ಇರುತ್ತದೆ. ಜನರಲ್ಲಿ ತಿಳಿವಳಿಕೆ ಮೂಡಿಸಿದಾಗ ಪ್ರಕರಣಗಳು ಇಳಿಮುಖವಾಗುತ್ತವೆ. ಕಾಯ್ದೆಗಳ ಬಗ್ಗೆಯೂ ಹೆಚ್ಚು ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಮಾತನಾಡಿ ಬಾಲ್ಯವಿವಾಹ ಮಾಡುವಲ್ಲಿ ಜಿಲ್ಲೆ ಕಳೆದ ನಾಲ್ಕು ತಿಂಗಳ ಹಿಂದೆ ಏಳನೇ ಸ್ಥಾನದಲ್ಲಿತ್ತು. ಜಿಲ್ಲೆಯನ್ನು ಬಾಲ್ಯವಿವಾಹ ಕಳಂಕರಹಿತ ಜಿಲ್ಲೆಯನ್ನಾಗಿಸಲು ಬಾಲ್ಯವಿವಾಹ ನಿಷೇಧ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರೂ ಪಣತೊಡಬೇಕಿದೆ ಎಂದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಪೋಕ್ಸೊ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಹೀಗಾಗಿ ಈ ಕಾಯ್ದೆಗಳ ಕುರಿತು ವ್ಯಾಪಕವಾಗಿ ಅರಿವು ಮೂಡಿಸಲಾಗುತ್ತಿದೆ. ಬಾಲ್ಯವಿವಾಹದಂತಹ ಪ್ರಕರಣಗಳನ್ನು ತಡೆಯಲು ಎಲ್ಲಾ ಹಂತದ ಅಧಿಕಾರಿಗಳು ಜವಾಬ್ದಾರಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗೂಡಿ ತಡೆಯುವ ಪ್ರಯತ್ನ ಮಾಡಬೇಕು ಎಂದು ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಿಳಿಸಿದರು.
ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಧರಣೇಶ್, ಮುಖ್ಯ ಲೆಕ್ಕಾಧಿಕಾರಿ ಹೆಚ್.ಎಸ್. ಗಂಗಾಧರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸರಸ್ವತಿ, ಮೈಸೂರಿನ ಒಡಿಪಿ ಸಂಸ್ಥೆಯ ಧನರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜ. 24ರಂದು ಯಳಂದೂರು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ, ಸಾರ್ವಜನಿಕರಿಂದ ಅಹವಾಲುಗಳ ಸ್ವೀಕಾರ
ಚಾಮರಾಜನಗರ, ಜನವರಿ 23 - ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಜನವರಿ 24 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಯಳಂದೂರು ತಾಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಹಾಗೂ ತಾಲೂಕು ಕಚೇರಿಯ ಪರಿಶೀಲನೆ ನಡೆಸುವರು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜ. 26ರಂದು ನಗರದಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ
ಚಾಮರಾಜನಗರ, ಜನವರಿ 23 - ಜಿಲ್ಲಾಡಳಿತದ ವತಿಯಿಂದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ ಪ್ರಸಾದ್, ಶಾಸಕರಾದ ಎನ್. ಮಹೇಶ್, ಆರ್. ನರೇಂದ್ರ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಿರಂಜನಕುಮಾರ್, ಡಾ. ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಮಧು ಜಿ. ಮಾದೇಗೌಡ, ಸಿ.ಎನ್. ಮಂಜೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಉಪಾಧ್ಯಕ್ಷರಾದ ಪಿ. ಸುಧಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ 2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಸೋಲಿಗರ ಮಾದಮ್ಮ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕøತರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರನ್ನು ಸನ್ಮಾನಿಸಲಾಗುತ್ತದೆ. ಕೆಎಸ್‍ಆರ್‍ಟಿಸಿ ವಿಭಾಗದಲ್ಲಿ ಅಪಘಾತ ರಹಿತ ಬಸ್ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತದೆ. ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಸನ್ಮಾನಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಜ. 24ರಂದು ನಗರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಅರಿವು ಜಾಥಾ ಕಾರ್ಯಕ್ರಮ
ಚಾಮರಾಜನಗರ, ಜನವರಿ 23 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ, ಕಾರ್ಮಿಕ ಇಲಾಖೆ, ಶ್ರೀ ವರಮಹಾಲಕ್ಷ್ಮಿ ಸಾಂಸ್ಕøತಿಕ ಕ್ರೀಡಾ ಸೇವಾ ಸಂಸ್ಥೆ ಹಾಗೂ ಮೊಬಿಲಿಟಿ ಇಂಡಿಯಾ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜನವರಿ 24 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಡಳಿತ ಭವನದವರೆಗೆ ಅರಿವು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಡಿ.ಎಸ್. ರಮೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬಾಲನ್ಯಾಯ ಮಂಡಳಿ ಅಧ್ಯಕ್ಷರಾದ ಚಂಪಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಗೀತಾಲಕ್ಷ್ಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎನ್.ಎಂ. ಸರಸ್ವತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಸ್.ಎನ್. ಮಂಜುನಾಥ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ್, ಶ್ರೀ ವರಮಹಾಲಕ್ಷ್ಮಿ ಸಾಂಸ್ಕøತಿಕ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷರಾದ ಜಿ. ಬಂಗಾರು, ಮೊಬಿಲಿಟಿ ಇಂಡಿಯಾ ಮುಖ್ಯಸ್ಥರಾದ ರಾಜಣ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಕುಶಲಕರ್ಮಿಗಳಿಗೆ ಸಾಲ-ಸಹಾಯಧನ : ಅರ್ಜಿ ಆಹ್ವಾನ
ಚಾಮರಾಜನಗರ, ಜನವರಿ 23 :- 2022-23ನೇ ಸಾಲಿನಲ್ಲಿ ಕುಶಲಕರ್ಮಿಗಳ ಅಭಿವೃದ್ಧಿಗಾಗಿ 50 ಸಾವಿರ ರೂ.ವರೆಗೆ ನೀಡಲಾಗುವ ಸಾಲ ಸಹಾಯಧನ ಸೌಲಭ್ಯಕ್ಕಾಗಿ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುಶಲಕರ್ಮಿಗಳ ಅಭಿವೃದ್ಧಿಗಾಗಿ ಸರ್ಕಾರವು 35 ಸಾವಿರ ಸಾಲ ಮತ್ತು 15 ಸಾವಿರ ರೂ. ಸಹಾಯಧನ ಸೇರಿದಂತೆ ಒಟ್ಟು 50 ಸಾವಿರ ರೂ.ವರೆಗೆ ನೀಡಲಿದೆ. 18ವರ್ಷ ಮೇಲ್ಟಟ್ಟ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 25ರಂದು ನಗರದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಜನವರಿ 23 :- ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ವತಿಯಿಂದ 13ನೇ ರಾಷ್ಟ್ರೀಯ ಮತದಾರರ ದಿನ ಆಚರಣೆ ಕಾರ್ಯಕ್ರಮವನ್ನು ಜನವರಿ 25ರಂದು ಮಧ್ಯಾಹ್ನ 1 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವರಾಜು, ಮತದಾನದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಜ. 24, 25ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸೆಲಿಂಗ್
ಚಾಮರಾಜನಗರ, ಜನವರಿ 23 - 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಸಂಬಂಧ ಪರಿಷ್ಕøತ ವೇಳಾಪಟ್ಟಿ ಅನ್ವಯ ಜನವರಿ 24, 25ರಂದು ಬೆಳಿಗ್ಗೆ 10 ಗಂಟೆಯಿಂದ ನಗರದ ರಾಮಸಮುದ್ರದ ಸಿ.ಆರ್. ಬಾಲಾರಪಟ್ಟಣ ಅನುದಾನಿತ ಪ್ರೌಢಶಾಲೆಯಲ್ಲಿ ಹೆಚ್ಚುವರಿ ಶಿಕ್ಷಕರನ್ನು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತದೆ.
ಜನವರಿ 24ರಂದು ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರನ್ನೂ ಒಳಗೊಂಡಂತೆ ಸಹ ಶಿಕ್ಷಕ ವೃಂದದವರು ಮತ್ತು ಜನವರಿ 25ರಂದು ಪ್ರಾಥಮಿಕ ಶಾಲೆಗಳ ಟಿಜಿಟಿ ಶಿಕ್ಷಕರು, ಶಾಸಕರ ಶಾಲೆಗಳ ಪದವೀಧರ ಮುಖ್ಯ ಶಿಕ್ಷಕರು (ಜಿ-ಹೆಚ್.ಎಂ) ಮತ್ತು ಪ್ರೌಢಶಾಲಾ ಸಹಶಿಕ್ಷಕರು ತತ್ಸಮಾನ ವೃಂದದವರಿಗೆ ಹೆಚ್ಚುವರಿ ಶಿಕ್ಷಕರನ್ನು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತದೆ.
ಅಂತಿಮ ಹೆಚ್ಚುವರಿ ಶಿಕ್ಷಕರ ಪಟ್ಟಿ ಹಾಗೂ ಹಾಲಿ ಹುದ್ದೆಗಳ ವಿವರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿರುವ ಶಿಕ್ಷಕರು ಆಯಾ ದಿನಾಂಕದಂದು ಕಡ್ಡಾಯವಾಗಿ ಹಾಜರಾಗಬೇಕು. ಕೌನ್ಸೆಲಿಂಗ್‍ಗೆ ಹಾಜರಾಗದಿರುವ ಶಿಕ್ಷಕರಿಗೆ ಡಮ್ಮಿ (ಪ್ರಾಕ್ಸಿ) ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎನ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


No comments:
Post a Comment