Saturday, 1 July 2023

01-07-2023 ಚಾಮರಾಜನಗರ ನ್ಯೂಸ್

 



ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ  
  
       ಚಾಮರಾಜನಗರ, ಜುಲೈ 01 :- ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಬೇಕು. ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಕುಡಿಯುವ ನೀರಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಮುಂದೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗದಿದ್ದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಿರಲು ಈಗಿನಿಂದಲೇ ಆಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು. ಜನರಿಗೆ ಕುಡಿಯುವ ನೀರಿನ ಬವಣೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದೆಂಬ ಬಗ್ಗೆ ಪೂರ್ವ ಪರಿಶೀಲನೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಈಗ ಇರುವ ಹಣವನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಕೆ ಮಾಡಲು ಸಿದ್ಧವಾಗಿಟ್ಟುಕೊಳ್ಳÀಬೇಕು. ಪ್ರಥಮ ಆದ್ಯತೆಯನ್ನು ಕುಡಿಯುವ ನೀರಿಗೆ ನೀಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಮುಂಬರುವ ದಿನಗಳಲ್ಲಿ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಕೊರತೆ ಬಾರದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಜಿಲ್ಲೆಯ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಇನ್ನಿತರ ಪರಿಕರಗಳನ್ನು ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಂಡಿರಬೇಕು. ಬೇಡಿಕೆಗೆ ತಕ್ಕಂತೆ ರೈತರಿಗೆ ಪೂರೈಸಬೇಕು. ಬೆಳೆಗಳಿಗೆ ವಿಮೆ ಸೌಲಭ್ಯ ಪಡೆಯಲು ಹೆಚ್ಚಿನ ಜಾಗೃತಿ ಮೂಡಿಸಬೇಕು. ಕರಪತ್ರ, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಇನ್ನಿತರ ವಿಧಾನಗಳ ಮೂಲಕ ಬೆಳೆ ವಿಮೆ ಕುರಿತು ಹೆಚ್ಚು ಪ್ರಚಾರ ಮಾಡಬೇಕು. ತಾಲೂಕು ಸಹಾಯಕ ಕೃಷಿ ನಿರ್ದೇಶಕರಿಗೆ ಈ ಬಗ್ಗೆ ಜವಾಬ್ದಾರಿ ನೀಡಬೇಕೆಂದು ಸಚಿವರು ತಿಳಿಸಿದರು.

ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮುಂಗಾರು ಹಂಗಾಮಿಗೆ ಈವರೆಗೆ ಎಷ್ಟು ಮಂದಿ ರೈತರು ಬೆಳೆ ವಿಮೆಗೆ ನೊಂದಾಯಿಸಿದ್ದಾರೆ ?, ಕಳೆದ ಬಾರಿ ವಿಮೆ ಮಾಡಿಸಿದವರಿಗೆ ಹಣ ಬಂದಿದಿಯೇ ? ಎಂಬ ಬಗ್ಗೆ ವಿವರ ನೀಡಬೇಕು. ಸಕಾಲದಲ್ಲಿ ಪ್ರಯೋಜನ ರೈತರಿಗೆ ತಲುಪಬೇಕು ಎಂದು ತಿಳಿಸಿದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಕಳೆದ ಬಾರಿ ಮಳೆಯಿಂದ ಬಾಳೆ ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗಿವೆ. ಈ ಬಗ್ಗೆ ನೀಡಲಾಗಿರುವ ಪರಿಹಾರಗಳ ಕ್ರಮದ ಕುರಿತು ಮಾಹಿತಿ ನೀಡಬೇಕು. ಮುಂದೆ ಮಳೆ ಬರದಿದ್ದರೆ ಪರಿಸ್ಥಿತಿ ನಿಭಾಯಿಸಲು ಯಾವ ಸಿದ್ದತಾ ಕ್ರಮ ಕೈಗೊಂಡಿದ್ದೀರಿ ? ಎಂಬ ಬಗ್ಗೆ ವಿವರ ನೀಡಬೇಕು ಎಂದರು.

      ಶಾಸಕರಾದ ಎಂ.ಆರ್. ಮಂಜುನಾಥ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದ ಹಲವೆಡೆ ಇತ್ತೀಚೆಗೆ ವೇಗವಾಗಿ ಬೀಸಿದ ಗಾಳಿ ಬಡಿತಕ್ಕೆ ಸಾಕಷ್ಟು ಬೆಳೆ ಹಾನಿಯಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ತೊಂದರೆ ಅನುಭವಿಸಿದ್ದು, ಬಾಳೆ ಹಾಳಾಗಿದೆ. ಇದಕ್ಕೆ ಹೆಚ್ಚಿನ ಪರಿಹಾರ ಸಿಗಬೇಕು ಎಂದರು.

ಸಹಕಾರ ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಎನ್. ಮಂಜುನಾಥ ಪ್ರಸಾದ್ ಅವರು ಮಾತನಾಡಿ ಮಳೆಯ ಮುನ್ಸೂಚನೆ ಬಗ್ಗೆ ಹವಾಮಾನ ಇಲಾಖೆ ನಿಖರ ಮಾಹಿತಿ ನೀಡಲಿದೆ. ಮಳೆ ಕೊರತೆಯಾದರೆ ಪರ್ಯಾಯವಾಗಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಪೂರ್ವಸಿದ್ದತೆಯನ್ನು ಅಧಿಕಾರಿಗಳು ಮಾಡಬೇಕಿದೆ ಎಂದು ತಿಳಿಸಿದರು.

ಕಾಡಂಚಿನ ಪ್ರದೇಶಗಳು, ಪೋಡುಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ ವಿಳಂಬವಾಗುತ್ತಿದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು. ಈ ಸಂದರ್ಭದಲ್ಲಿ ಸಚಿವರು ಕುಡಿಯುವ ನೀರಿನಂತಹ ಅಗತ್ಯ ಸೌಕರ್ಯಗಳಿಗೆ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ನಡೆಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಿ ಎಂದರು.

ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಜಿಲ್ಲೆಯ ಆಸ್ಪತ್ರೆ ಹಾಗೂ ವೈದ್ಯರ ಲಭ್ಯತೆ ಬಗ್ಗೆ ವಿವರ ಪಡೆದ ಉಸ್ತುವಾರಿ ಸಚಿವರು ಡಯಾಲಿಸಿಸ್ ಚಿಕಿತ್ಸೆಗೆ ಆಯಾ ಭಾಗದಲ್ಲಿಯೇ ಅನುಕೂಲವಾಗಬೇಕು. ಪ್ರಸ್ತಾವನೆಗೊಂಡಿರುವ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು. 

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಅವರು ಮಾತನಾಡಿ ಕಾಡಂಚಿನ ಭಾಗಗಳಲ್ಲಿ ಜನರು ಆಸ್ಪತ್ರೆಗೆ ಬರಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ವಾಸಿಗಳಿಗೆ ಸಮರ್ಪಕವಾಗಿ ಆರೋಗ್ಯ ಸೌಲಭ್ಯ ಸಿಗÀಬೇಕು. ಡಯಾಲಿಸಿಸ್ ನ ಒಂದು ಚಿಕಿತ್ಸಾ ಕೇಂದ್ರ ವ್ಯವಸ್ಥೆಗೆ ನನ್ನ ಕ್ಷೇತ್ರದ ಅನುದಾನದಲ್ಲಿ ನೆರವು ನೀಡುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಅವರು ಮಾತನಾಡಿ ಅದಿವಾಸಿಗಳ ಸಂಖ್ಯಗೆ ಅನುಗುಣವಾಗಿ ಆರೋಗ್ಯ ಸೌಲಭ್ಯ ಒದಗಿಸಬೇಕಿದೆ. ವಾರದಲ್ಲಿ ಎರಡು ದಿನ ಮೊಬೈಲ್ ವಾಹನಗಳ ಮೂಲಕ ಹಾಡಿಗಳಿಗೆ ಸಂಚರಿಸಿ ಆರೋಗ್ಯ ತಪಾಸಣೆ, ಚಿಕಿತ್ಸೆ ನೀಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ಅಧಿಕಾರಿಗಳು ಸ್ಪಂದನಾಶೀಲರಾಗಿ ಕಾರ್ಯನಿರ್ವಹಿಸಬೇಕು. ಜನರನ್ನು ಅಲೆದಾಡಿಸದೇ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಯಾವುದೇ ಸಬೂಬು, ಕಾರಣ ಹೇಳಿ ಜನರ ಕೆಲಸ ಮಾಡುವುದನ್ನು ನಿಲ್ಲಿಸಬಾರದು. ಸರ್ಕಾರ ಇರುವುದೇ ಜನರ ಕೆಲಸಕ್ಕಾಗಿ. ಸಾರ್ವಜನಿಕರ ಒಳಿತಿಗೆ ಕಾರ್ಯನಿರ್ವಹಿಸಿದರೆ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ ಎಂದು ತಿಳಿಸಿದರು.

ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ತಮ್ಮ ಕ್ಷೇತ್ರದ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಾಹಿತಿ ಹಕ್ಕಿನಡಿ ಕೇಳಲಾದ ಮಾಹಿತಿಗೆ ಹೆಚ್ಚು ಮೊತ್ತದ ಶುಲ್ಕ ಕಟ್ಟುವಂತೆ ಅರ್ಜಿದಾರರಿಗೆ ಕೇಳಲಾಗಿದೆ. ಈ ಬಗ್ಗೆ ನಿಖರವಾಗಿ ಪರಿಶೀಲಿಸಿ ವಿವರ ನೀಡಬೇಕು ಎಂದರು.  

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶು ಸಂಗೋಪನೆ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಪೂವಿತ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ, ಬಂಡೀಪುರ ಹುಲಿ ಸಂರಕ್ಷೀತ ಪ್ರದೇಶದ ನಿರ್ದೇಶಕರಾದ ರಮೇಶ್‍ಕುಮಾರ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ದೀಪಾ ಕಂಟ್ರಾಕ್ಟರ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ವನ ಮಹೋತ್ಸವಕ್ಕೆ ಚಾಲನೆ  

        ಚಾಮರಾಜನಗರ, ಜುಲೈ 01 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಗಿಡಗಳನ್ನು ನೆಡುವ ವನ ಮಹೋತ್ಸವ ಕಾರ್ಯಕ್ರಮಕ್ಕೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಚಾಲನೆ ನೀಡಿದರು.

    ತಾಲೂಕಿನ ಬದನಗುಪ್ಪೆ ಬಳಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಗಿಡ ನೆಡುವ ಮೂಲಕ ಉಸ್ತುವಾರಿ ಸಚಿವರು ವನ ಮಹೋತ್ಸವಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ವನ ಮಹೋತ್ಸದ ಅಂಗವಾಗಿ 6 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದರು. 

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಪೂವಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ದೀಪಾ ಕಂಟ್ರಾಕ್ಟರ್, ಇತರರು ಉಪಸ್ಥಿತರಿದ್ದರು.

ಜುಲೈ 3 ರಂದು ಶ್ರೀ ಚಾಮರಾಜೇಶ್ವರಸ್ವಾಮಿ ಮಹಾ ರಥೋತ್ಸವ 
  
       ಚಾಮರಾಜನಗರ, ಜುಲೈ 01- ನಗರದಲ್ಲಿ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾ ರಥೋತ್ಸವವು ಜುಲೈ 3 ರಂದು ನೆರವೇರಲಿದೆ.  

      ಜುಲೈ 3ರಂದು ಸೋಮವಾರ ಮೂಲ/ಪೂರ್ವಾಷಾಢ ನಕ್ಷತ್ರದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಶ್ರೀಮನ್ಮಹಾರಥಾರೋಹಣ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಆಯ್ಕೆ
  
       ಚಾಮರಾಜನಗರ, ಜುಲೈ 01 :- ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 2023-24ನೇ ಸಾಲಿನಲ್ಲಿ ಏರ್ಪಡಿಸಿದ್ದ ರಸಪ್ರಶ್ನೆಯಲ್ಲಿ ಚಾಮರಾಜನಗರದ ಮಲ್ಲಯ್ಯನಪುರದಲ್ಲಿರುವ ಆದರ್ಶ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿಗಳಾದ ಎ.ಎಂ. ಶರತ್ ಹಾಗೂ ಯು.ಎಂ. ಮಹದೇವಪ್ರಸಾದ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 2ರಂದು ಗ್ರಾಹಕ ಸಂರಕ್ಷಣೆ ಕಾಯ್ದೆ ಕುರಿತು ಸಂವಾದ ಪ್ರಸಾರ 
  
       ಚಾಮರಾಜನಗರ, ಜುಲೈ 01 - ಗ್ರಾಹಕರ ಸಂರಕ್ಷಣಾ ಕಾಯ್ದೆ-2019ರ ಕುರಿತು ಅರಿವು ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿ ವಿಜಯಕುಮಾರ್ ಅವರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ ದೂರದರ್ಶನ ಚಂದನ ವಾಹಿನಿಯಲ್ಲಿ ಜುಲೈ 2ರಂದು ಸಂಜೆ 6ರಿಂದ 6.30 ಗಂಟೆಯವರೆಗೆ ಪ್ರಸಾರವಾಗಲಿದೆ. 

ಪಕ್ಷಕಾರರು, ವಕೀಲರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಹನ ಹರಾಜು 

        ಚಾಮರಾಜನಗರ, ಜುಲೈ 01 :- ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಕ್ರಿಮಿನಲ್ ಮೊಕದ್ದಮೆಗಳಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ದ್ವಿಚಕ್ರ ವಾಹನಗಳನ್ನು ಜುಲೈ 8ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗವಾಗಿ ಹರಾಜು ಮಾಡಲಾಗುತ್ತದೆ. 

      ವಾಹನಗಳ ವಿವರ ಹಾಗೂ ಹರಾಜು ಸಂಬಂಧ ಷರತ್ತುಗಳನ್ನು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಡೆಯಬಹುದೆಂದು ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

     

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು