ಜು. 8ರಂದು ರಾಷ್ಟ್ರೀಯ ಲೋಕ್ ಅದಾಲತ್ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ
ಚಾಮರಾಜನಗರ, ಜುಲೈ 4 :- ಚಾಮರಾಜನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ರಾಜಿಯೋಗ್ಯ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜುಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರಗಳ ಕೇಂದ್ರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ನ್ಯಾಯಾಧೀಶರು ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಹಾಗೂ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ತಾಲೂಕಿನ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದರು.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ, ವಿದ್ಯುತ್ ಮತ್ತು ನೀರಿನ ಶುಲ್ಕ, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿಗೆ ಸಂಬಂಧಿಸಿದ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜಿಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣ (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ)ಗಳನ್ನು ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಗಸೂಚಿ (ಎಸ್.ಓ.ಪಿ) ಯಂತೆ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯೋಗ್ಯ ಪ್ರಕರಣಗಳನ್ನು ಶೀಘ್ರ ಹಾಗೂ ಪರಿಣಾಮಕಾರಿ ತೀರ್ಮಾನಕ್ಕಾಗಿ ಚಾಮರಾಜನಗರ ಜಿಲ್ಲಾ ಕೇಂದ್ರ ನ್ಯಾಯಾಲಯಗಳಲ್ಲಿ, ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸಂಧಾನಕಾರರ ಮೂಲಕ ಸೂಕ್ತ ಮಾರ್ಗದರ್ಶನ ನೀಡುವ ಪ್ರತಿದಿನ ಪೂರ್ವಭಾವಿ ಸಮಾಲೋಚನೆಗಳು ಭೌತಿಕ /ವಿ.ಸಿ. ಮೂಲಕ ನಡೆಯುತ್ತಿದೆ. ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಆನ್‍ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್, ವಾಟ್ಸ್ ಆಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಸಮಿತಿಗಳನ್ನು ಸಂಪರ್ಕಿಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿ ಎಂದರು.
ಜುಲೈ 8 ರಂದು ನಡೆಯುವ ಮೆಗಾ ಲೋಕ ಅದಾಲತ್ ನಲ್ಲಿ ಸಂಬಂಧಿತ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗಿ ಪಕ್ಷಕಾರರ ನಡುವೆ ಬಾಂಧವ್ಯ ನೆಲೆಸುವಂತಾಗುತ್ತದೆ ಎಂದು ತಿಳಿಸಿದರು.
ಕಳೆದ ಫೆಬ್ರವರಿ 11ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 11,975 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಪೈಕಿ 1621 ನ್ಯಾಯಾಲಯದ ಪ್ರಕರಣಗಳಾಗಿದ್ದು, 10354 ವ್ಯಾಜ್ಯ ಪೂರ್ವ ಪ್ರಕರಣಗಳಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಮಾತನಾಡಿ ಲೋಕ್ ಅದಾಲತ್ ನಲ್ಲಿ ಹೆಚ್ಚೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಮಾ ಕಂಪನಿಗಳು, ಭೂ ಸ್ವಾಧೀನಾಧಿಕಾರಿಗಳು, ಬ್ಯಾಂಕ್‍ಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೆÇಲೀಸ್ ಇಲಾಖೆ, ವಕೀಲರು, ಕಂದಾಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಜುಲೈ 8ರಂದು ನಡೆಯುವ ಲೋಕ್ ಅದಾಲತ್ ನಲ್ಲಿ 13 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್ ಅವರು ಮಾತನಾಡಿ ಬೃಹತ್ ಲೋಕ್ ಅದಾಲತ್ ನಲ್ಲಿ ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಇತರೆ ರಾಜಿಯೋಗ್ಯ ಪ್ರಕರಣಗಳನ್ನು ಬಗೆಹರಿಸಲಾಗುತ್ತದೆ. ಕಕ್ಷಿದಾರರು ಈ ಲೋಕ್ ಅದಾಲತ್ ನ ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು.
5 ಕಿ.ಮೀ ಒಳಗೆ ಗೃಹ ಬಳಕೆ ಅನಿಲ ಸಿಲಿಂಡರ್‍ಗಳ ಸಾಗಾಣಿಕೆ ಉಚಿತ
ಚಾಮರಾಜನಗರ, ಜುಲೈ 04- ಜಿಲ್ಲೆಯ ಎಲ್ಲ ಅನಿಲ ವಿತರಕರು 5 ಕಿ.ಮೀ. ಒಳಗೆ ಭರ್ತಿ ಗೃಹ ಬಳಕೆಯ ಅನಿಲ ಸಿಲಿಂಡರ್ ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡಲು ಯಾವುದೇ ದರವನ್ನು ಪಡೆಯದೆ ಉಚಿತವಾಗಿ ಸರಬರಾಜು ಮಾಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಅನಿಲ ವಿತರಕರು 5 ಕಿ.ಮೀ ಒಳಗೆ ಗೃಹ ಬಳಕೆಯ ಅನಿಲ ಸಿಲಿಂಡರ್ ಗಳನ್ನು ಗ್ರಾಹಕರಿಗೆ ತಲುಪಿಸಲು ಯಾವುದೇ ದರವನ್ನು ಪಡೆಯುವಂತಿಲ್ಲ. 5 ಕಿ.ಮೀ ನಂತರ ಪ್ರತೀ ಕಿಲೋ ಮೀಟರ್ ಗೆ ಪ್ರತಿ ಸಿಲಿಂಡರ್ ಗೆ 1.60 ರೂ. ಪಡೆಯಬೇಕು. ಹೆಚ್ಚು ಪಡೆದಲ್ಲಿ ದಿ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ ರೆಗ್ಯುಲೇಷನ್ ಆಫ್ ಸಪ್ಲೈ ಅಂಡ್ ಡಿಸ್ಟ್ರುಬ್ಯೂಷನ್ ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೆಶಕರಾದ ಯೋಗಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದರ್ಶ ವಿದ್ಯಾಲಯ : ಆಯ್ಕೆ ಪಟ್ಟಿ ಪ್ರಕಟ
ಚಾಮರಾಜನಗರ, ಜುಲೈ 04 - ಚಾಮರಾಜನಗರದ ಮಲ್ಲಯ್ಯನಪುರದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶ ಸಂಬಂಧ ಎರಡನೇ ಸುತ್ತಿನ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಈಗಾಗಲೆ ದಾಖಲಾತಿ ಆರಂಬವಾಗಿದ್ದು, ಜುಲೈ 13ರವರೆಗೂ ದಾಖಲಾತಿ ಮಾಡಿಕೊಳ್ಳಲಾಗುತ್ತದೆ ಎಂದು ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ ಉಪ ಚುನಾವಣೆ : ವೇಳಾ ಪಟ್ಟಿ ಪ್ರಕಟ
ಚಾಮರಾಜನಗರ, ಜುಲೈ 04 :- ರಾಜ್ಯ ಚುನಾವಣಾ ಆಯೋಗವು ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ಜುಲೈ 6ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಜುಲೈ 12 ಕೊನೆಯ ದಿನವಾಗಿದೆ. ಜುಲೈ 13ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಜುಲೈ 15ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಜುಲೈ 23ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ. ಮರುಮತದಾನದ ಅವಶ್ಯವಿದ್ದರೆ ಜುಲೈ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಜುಲೈ 26ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜುಲೈ 6 ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಚಾಮರಾಜನಗರ ತಾಲೂಕಿನ ಮಸಣಾಪುರ, ಹೆಗ್ಗೋಠಾರ, ಹರವೆ, ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ, ಗೌಡಹಳ್ಳಿ ಗ್ರಾಮ ಪಂಚಾಯಿತಿಗಳ ತಲಾ ಒಂದು ಸ್ಥಾನ ಹಾಗೂ ಕೊಳ್ಳೇಗಾಲ ತಾಲೂಕಿನ ಸಿದ್ದಯ್ಯನಪುರ ಗ್ರಾಮ ಪಂಚಾಯಿತಿಯ ಎರಡು ಸ್ಥಾನಗಳು ಸೇರಿದಂತೆ ಒಟ್ಟಾರೆ 6 ಗ್ರಾಮ ಪಂಚಾಯಿತಿಗಳ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಪೂವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು. 7ರಂದು ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕ ಹಣ ಎಣಿಕೆ
ಚಾಮರಾಜನಗರ, ಜುಲೈ 04 - ಮಲೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಎಣಿಕೆ ಕಾರ್ಯವನ್ನು ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಜುಲೈ 7ರಂದು ಬೆಳಿಗ್ಗೆ ಸೂಕ್ತ ಪೊಲೀಸ್ ಬಂದೋಬಸ್ತ್‍ನೊಂದಿಗೆ ನಡೆಸಲಾಗುವುದು ಎಂದು ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕರಾದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
No comments:
Post a Comment